ಧಾರವಾಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ ಮತ್ತು ಸಮಾಜ ಕಲ್ಯಾಣ ಇಲಾಖೆಯಿಂದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು (ನ.26) ಬೆಳಿಗ್ಗೆ ಸಂವಿಧಾನ ದಿನ ಆಚರಿಸಲಾಯಿತು.
ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹಾಗೂ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಸುರೇಶ ಇಟ್ನಾಳ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.
ಮತ್ತು ಅಧಿಕಾರಿಗಳಿಗೆ, ಸಾರ್ವಜನಿಕರಿಗೆ ಜಿಲ್ಲಾಧಿಕಾರಿಗಳು ಪೀಠಿಕೆ ಬೋಧಿಸಿದರು. ಈ ವರ್ಷ ಸಂವಿಧಾನ ದಿನವನ್ನು ಭಾರತ-ಪ್ರಜಾಪ್ರಭುತ್ವದ ತಾಯಿ ಎಂಬ ವಿಷಯದ ವಾಕ್ಯದೊಂದಿಗೆ ಆಚರಿಸಲಾಯಿತು.
ನಂತರ ಅವರು ಮಾತನಾಡಿ, ಸಂವಿಧಾನ ನಮ್ಮ ರಾಷ್ಟ್ರದ ಪವಿತ್ರ ಗ್ರಂಥ. ಇಡೀ ವಿಶ್ವಕ್ಕೆ ಇದು ಮಾದರಿಯಾಗಿದೆ. ಇಂತಹ ಶ್ರೇಷ್ಠತೆಯ ಮಹತ್ವ ಸಾರಲು ನಮಗೆ ನಾವೇ ಅರ್ಪಿಸಿಕೊಂಡಿರುವ ಸಂವಿಧಾನ ದಿನವನ್ನು ಇಂದು ಆಚರಿಸುತ್ತಿದ್ದೇವೆ ಎಂದು ಅವರು ಹೇಳಿದರು.
ಇದೇ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಡಾ.ಬಿ.ಆರ್.ಅಂಬೇಡ್ಕರ್ ಸಂಶೋಧನಾ ಕೇಂದ್ರ ಪ್ರಕಟಿಸಿರುವ ಭಾರತದ ಸಂವಿಧಾನ ಪುಸ್ತಕವನ್ನು ಜಿಲ್ಲಾಧಿಕಾರಿಗಳು ಬಿಡುಗಡೆ ಮಾಡಿದರು.
ಕಾರ್ಯಕ್ರಮದಲ್ಲಿ ಧಾರವಾಡ ಜಿ.ಪಂ. ಸಿಇಓ ಡಾ.ಸುರೇಶ ಇಟ್ನಾಳ, ಅಪರ ಜಿಲ್ಲಾಧಿಕಾರಿ ಶಿವಾನಂದ ಭಜಂತ್ರಿ, ಜಿ.ಪಂ.ಉಪ ಕಾರ್ಯದರ್ಶಿ ರೇಖಾ ಡೊಳ್ಳಿನ, ಮುಖ್ಯ ಲೇಕ್ಕಾಧಿಕಾರಿ ಲಲಿತಾ ಲಮಾಣಿ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಅಲ್ಲಾಬಕ್ಷಿ ಎಂ.ಎಸ್. ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಾರ್ವಜನಿಕರು ಭಾಗವಹಿಸಿದ್ದರು.
ಡಾ.ಬಿ.ಆರ್. ಅಂಬೇಡ್ಕರರವರ ಪುತ್ಥಳಿಗೆ ಮಾಲಾರ್ಪಣೆ: ಸಂವಿಧಾನ ದಿನ ಆಚರಣೆ ಹಿನ್ನಲೆಯಲ್ಲಿ ಕಲಾಭವನದ ಎದುರಿಗೆ ಇರುವ ಡಾ.ಬಿ.ಆರ್.ಅಂಬೇಡ್ಕರರವರ ಪುತ್ಥಳಿಗೆ ಜಿಲ್ಲಾಧಿಕಾರಿಗಳು, ಹಿರಿಯ ಅಧಿಕಾರಿಗಳು, ಚುನಾಯಿತ ಪ್ರತಿನಿಧಿಗಳು, ಗಣ್ಯರು ಮತ್ತು ಸಾರ್ವಜನಿಕರು ಮಾಲಾರ್ಪಣೆ ಮಾಡಿದರು.