ಕಲೆ ಮತ್ತು ಸಂಸ್ಕೃತಿ ಪ್ರತಿಯೊಬ್ಬರಿಗೂ ಅರ್ಥವಾಗುವ ಮಾಧ್ಯಮವಾಗಿದ್ದು, ಆ ನಿಟ್ಟಿನಲ್ಲಿ ಹಿಂದಿನಿಂದಲೂ ಉಳಿಸಿಕೊಂಡು ಬಂದಿರುವ ಕಲಾಪ್ರಕಾರಗಳಿಗೆ ಮತ್ತಷ್ಟು ಪ್ರೋತ್ಸಾಹ ದೊರೆಯುವಂತಾಗಬೇಕು ಎಂದು ಮಡಿಕೇರಿ ಕುಶಾಲನಗರ ತಾಲ್ಲೂಕಿನ ಗುಡ್ಡೆಹೊಸೂರು ಗ್ರಾ.ಪಂ.ಅಧ್ಯಕ್ಷರಾದ ಎಸ್.ಎಸ್.ನಂದಿನಿ ಅವರು ಹೇಳಿದ್ದಾರೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಸಮಾಜ ಕಲ್ಯಾಣ ಇಲಾಖೆ ಸಹಕಾರದಲ್ಲಿ ಪರಿಶಿಷ್ಟ ಜಾತಿ ಉಪ ಯೋಜನೆಯಡಿ ಕುಶಾಲನಗರ ಬಳಿಯ ಬಸವನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲಾ ಸಭಾಂಗಣದಲ್ಲಿ ಶನಿವಾರ ನಡೆದ ‘ಮಡಿಕೇರಿ ಜನಪರ ಉತ್ಸವ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಕೊಡವ ವಾದ್ಯ, ಕಂಸಾಳೆ, ಡೊಳ್ಳು ಕುಣಿತ, ಪೂಜಾ ಕುಣಿತ, ನಂದಿಧ್ವಜ, ಹುಲಿವೇಷ, ಗಾರುಡಿಗೊಂಬೆ, ಭರತನಾಟ್ಯ, ಸುಗಮ ಸಂಗೀತ ಹೀಗೆ ಹಲವು ಜಾನಪದ ಕಲಾಪ್ರಕಾರಗಳು ಇಂದಿಗೂ ಸಹ ಜನಮನ ಸೆಳೆಯುತ್ತವೆ.
ಆದ್ದರಿಂದ ಇಂತಹ ಕಲೆಗಳನ್ನು ಪ್ರೋತ್ಸಾಹಿಸುತ್ತಿರುವುದು ಶ್ಲಾಘನೀಯ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.
ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಶೇಖರ್ ಅವರು ಮಾತನಾಡಿ ಕಲೆಗಳನ್ನು ಗೌರವಿಸಬೇಕು. ನಾಡಿನ ಕಲೆ, ಸಂಸ್ಕೃತಿಯನ್ನು ಅನಾವರಣಗೊಳಿಸಿ ಪ್ರೋತ್ಸಾಹಿಸುವಲ್ಲಿ ಸರ್ಕಾರ ಮುಂದಾಗಿದೆ. ಆ ನಿಟ್ಟಿನಲ್ಲಿ ಕಲಾ ಪ್ರಕಾರಗಳನ್ನು ಪ್ರೋತ್ಸಾಹಿಸಲಾಗುತ್ತಿದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.
ಸರ್ಕಾರ ಪರಿಶಿಷ್ಟ ಜಾತಿ ಉಪ ಯೋಜನೆಯಡಿ ಕಲಾವಿದರನ್ನು ಪ್ರೋತ್ಸಾಹಿಸುವಲ್ಲಿ ಹಲವು ಕಾಯಕ್ರಮ ಹಮ್ಮಿಕೊಂಡಿದೆ. ಆ ದಿಸೆಯಲ್ಲಿ ‘ಜನಪರ ಉತ್ಸವ’ ಕಲೆ ಮತ್ತು ಕಲಾವಿದರಿಗೆ ಪ್ರೋತ್ಸಾಹ ನೀಡುತ್ತಿದೆ ಎಂದು ಅವರು ಅಭಿಪ್ರಾಯಪಟ್ಟರು.
ಭಾಗಮಂಡಲ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರಾದ ಲೋಕೇಶ್ ಅವರು ಮಾತನಾಡಿ ನಾಡಿನಲ್ಲಿ ಹಾಗೂ ಜಿಲ್ಲೆಯಲ್ಲಿ ವಿವಿಧ ಕಲಾಪ್ರಕಾರಗಳು ಇದ್ದು, ಅವುಗಳನ್ನು ಪ್ರೋತ್ಸಾಹಿಸಲಾಗುತ್ತದೆ. ಕಲೆ ಮತ್ತು ಸಂಸ್ಕೃತಿ ಬದುಕಿನ ಅವಿಭಾಜ್ಯ ಅಂಗವಾಗಿದೆ ಎಂದು ಹೇಳಿದರು.
ಶಿಕ್ಷಣ, ಕ್ರೀಡೆ, ಕಲೆ, ಸಂಸ್ಕೃತಿ, ಸಾಹಿತ್ಯ ಒಂದಕ್ಕೊಂದು ಅವಿನಾಭಾವ ಸಂಬಂಧವನ್ನು ಹೊಂದಿದ್ದು, ಕಲಾ ಪ್ರಕಾರಗಳಿಗೆ ಹೆಚ್ಚಿನ ಪ್ರೋತ್ಸಾಹ ದೊರೆಯುವಂತೆ ಮಾಡಲು ಸರ್ಕಾರ ಮುಂದಾಗಿದೆ ಎಂದರು.
ಕಲಾವಿದರಾದ ರವಿಶಂಕರ್ ಅವರು ಮಾತನಾಡಿ ಪ್ರತಿಯೊಬ್ಬರ ಮನಸ್ಸನ್ನು ಬೆಸೆಯುವುದೇ ಜನಪರ ಉತ್ಸವವಾಗಿದ್ದು, ಎಲ್ಲರನ್ನು ಸೆಳೆಯುವ ಶಕ್ತಿ ಕಲಾಪ್ರಕಾರಗಳಿಗೆ ಇದೆ.
ಆ ನಿಟ್ಟಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ವಿವಿಧ ಕಲಾಪ್ರಕಾರಗಳನ್ನು ಪ್ರೋತ್ಸಾಹಿಸುತ್ತಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.