ಧಾರವಾಡ ಜಿಲ್ಲಾಧಿಕಾರಿಯಾಗಿ ಗುರುದತ್ತ ಹೆಗಡೆ ಅಧಿಕಾರ ಸ್ವೀಕಾರ

ಧಾರವಾಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ 2014 ರ ಐಎಎಸ್ ಬ್ಯಾಚಿನ ಗುರುದತ್ತ ನಾರಾಯಣ ಹೆಗಡೆ ಅವರು ನಿನ್ನೆ ನಿರ್ಗಮಿತ ಜಿಲ್ಲಾಧಿಕಾರಿ ನಿತೇಶ್ ಕೆ ಪಾಟೀಲ ಅವರಿಂದ ಅಧಿಕಾರ ಸ್ವೀಕರಿಸಿದರು.

ಗುರುದತ್ತ ಹೆಗಡೆ ಅವರು ಮೂಲತ: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲ್ಲೂಕಿನ ಹೊನ್ನಗದ್ದೆ ಗ್ರಾಮದವರು. ಪ್ರಾಥಮಿಕ,ಪ್ರೌಢ ಶಿಕ್ಷಣವನ್ನು ಧಾರವಾಡದ ಕೆಇ ಬೋರ್ಡ ಶಾಲೆಯಲ್ಲಿ ವ್ಯಾಸಂಗ ಮಾಡಿದ್ದಾರೆ.

ಪಿಯು ಶಿಕ್ಷಣ ಧಾರವಾಡದಲ್ಲಿಯೇ ಪೂರೈಸಿದ್ದಾರೆ. ಬೆಂಗಳೂರಿನ ಆರ್. ವಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಇಲೆಕ್ಟ್ರಾನಿಕ್ ಇಂಜಿನಿಯರಿಂಗ್ ಪದವಿ ಪಡೆದಿದ್ದಾರೆ.

ಬಳಿಕ 2014ರಲ್ಲಿ ಯುಪಿಎಸ್‍ಸಿ ಯ ನಾಗರಿಕ ಸೇವಾ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಭಾರತೀಯ ಆಡಳಿತ ಸೇವೆಗೆ ಆಯ್ಕೆಯಾದರು. ಪ್ರೊಬೇಷನರಿ ಅವಧಿಯನ್ನು ಬೀದರ ಜಿಲ್ಲೆಯಲ್ಲಿ ಪೂರೈಸಿದ್ದಾರೆ.

ಕೊಪ್ಪಳದ ಉಪವಿಭಾಗಾಧಿಕಾರಿಯಾಗಿ, ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ, ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರಾಗಿ ಸೇವೆ ಸಲ್ಲಿಸಿದ್ದಾರೆ.

ಪ್ರಸ್ತುತ ಹುಬ್ಬಳ್ಳಿಯಲ್ಲಿರುವ ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಹುದ್ದೆ ನಿರ್ವಹಿಸುತ್ತಿದ್ದರು.

 ಹೆಚ್ಚುವರಿಯಾಗಿ ವಾಯವ್ಯ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ ಹಾಗೂ ಬಿಆರ್‌ಟಿಎಸ್ ವ್ಯವಸ್ಥಾಪಕ ನಿರ್ದೇಶಕರಾಗಿಯೂ ಕೂಡ ಕಾರ್ಯನಿರ್ವಹಿಸಿದ್ದಾರೆ.

ಇದೀಗ ಧಾರವಾಡ ಜಿಲ್ಲಾಧಿಕಾರಿ ಹುದ್ದೆ ಸ್ವೀಕರಿಸಿದ್ದಾರೆ. ನಿರ್ಗಮಿತ ಜಿಲ್ಲಾಧಿಕಾರಿ ನಿತೇಶ್ ಕೆ ಪಾಟೀಲ ಅವರು ಬೆಳಗಾವಿ ಜಿಲ್ಲಾಧಿಕಾರಿಯಾಗಿ ವರ್ಗಾವಣೆಯಾಗಿದ್ದಾರೆ.

ಅಪರ ಜಿಲ್ಲಾಧಿಕಾರಿ ಶಿವಾನಂದ ಭಜಂತ್ರಿ, ಉಪವಿಭಾಗಾಧಿಕಾರಿ ಅಶೋಕ ತೇಲಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಎಸ್.ಎನ್.ರುದ್ರೇಶ, ಧಾರವಾಡ ತಹಸೀಲ್ದಾರ ಡಾ.ಸಂತೋಷಕುಮಾರ ಬಿರಾದಾರ ಮತ್ತಿತರರು ಇದ್ದರು.

Share this article!

Leave a Reply

Your email address will not be published. Required fields are marked *

error: Content is protected !!