ಹುಬ್ಬಳ್ಳಿ ಧಾರವಾಡ ಬೈಪಾಸ್ ಅಗಲೀಕರಣ ಕಾಲಮಿತಿಯೊಳಗೆ ಪೂರ್ಣ

ಹುಬ್ಬಳ್ಳಿ ಧಾರವಾಡ ಬೈಪಾಸ್ ಅಗಲೀಕರಣ ಕಾಮಗಾರಿಗೆ ಈಗಾಗಲೇ ಶಿಲಾನ್ಯಾಸ ನೆರವೇರಿಸಲಾಗಿದೆ. ಎರಡು ವರ್ಷದಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ರಸ್ತೆಯನ್ನು ಅಗಲೀಕರಣ ಮಾಡಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಹಾಲಪ್ಪ ಆಚಾರ ಅವರು ಹೇಳಿದರು.

ಹುಬ್ಬಳ್ಳಿಯ ಸರ್ಕ್ಯೂಟ್ ಹೌಸ್ ನಲ್ಲಿ ನಿನ್ನೆ ರಸ್ತೆ ಅಪಘಾತ ನಿಯಂತ್ರಣ, ಬೈಪಾಸ್ ಅಗಲೀಕರಣ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು.

ನಿನ್ನೆ ರಾತ್ರಿ ಹುಬ್ಬಳ್ಳಿಯ ರೇವಡಿಹಾಳ ಬೈಪಾಸನಲ್ಲಿ ಖಾಸಗಿ ಬಸ್ ಹಾಗೂ ಲಾರಿ ನಡುವೆ ಭೀಕರ ಅಪಘಾತ ನಡೆದಿದೆ. 29 ಜನರಲ್ಲಿ 6 ಜನರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಇಬ್ಬರು ಕಿಮ್ಸ್ ಆಸ್ಪತ್ರೆಯಲ್ಲಿ ನಿಧನರಾದರು.

5 ಜನ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆದು ತಮ್ಮ ಊರುಗಳಿಗೆ ತೆರಳಿದ್ದಾರೆ. ಮೃತರ ಕುಟುಂಬಕ್ಕೆ ಹಾಗೂ ಗಾಯಾಳುಗಳಿಗೆ ಪರಿಹಾರ ನೀಡುವ ಕುರಿತು ಮುಖ್ಯಮಂತ್ರಿಗಳ ಜೊತೆ ಚರ್ಚಿಸಲಾಗುವುದು ಎಂದು ಅವರು ಹೇಳಿದರು.

ಬೈಪಾಸ್ ರಸ್ತೆ ಚಿಕ್ಕದಾಗಿದ್ದು, ವಾಹನಗಳ ಓಡಾಟ ಸಂಖ್ಯೆ ಹೆಚ್ಚಾಗಿರುತ್ತದೆ‌. ಚಾಲಕರ ನಿರ್ಲಕ್ಷ್ಯ, ಬೇಜವಾಬ್ದಾರಿಯಿಂದ ಇಂತಹ ಘಟನೆಗಳು ಸಂಭವಿಸುತ್ತಿವೆ.

ಜನರಿಗೆ ಉತ್ತಮ ಗುಣಮಟ್ಟದ ರಸ್ತೆ ನಿರ್ಮಿಸಿ ಸಂಚಾರಕ್ಕೆ ಅನುಕೂಲ ಮಾಡಿಕೊಡಲಾಗುವುದು ಎಂದು ಅವರು ತಿಳಿಸಿದರು.

ರಸ್ತೆಯ ಪಕ್ಕದಲ್ಲಿ ಜಾಗೃತಿ ಫಲಕಗಳನ್ನು ಅಳವಡಿಸಲಾಗುವುದು. ರಸ್ತೆ ಕಾಮಗಾರಿ ಮುಗಿಯುವವರೆಗೂ ಸಾರ್ವಜನಿಕರ ಸಹಕಾರ ಬಹಳ ಮುಖ್ಯ ಎಂದು ಅವರು ಹೇಳಿದರು.

ಉತ್ತರ ಕರ್ನಾಟಕ ಜನರಿಗೆ ಕಿಮ್ಸ್ ಉತ್ತಮ ಸೇವೆ ನೀಡುತ್ತಿದೆ. ಕಿಮ್ಸ್ ಸಮಸ್ಯೆಗಳ ಕುರಿತು ಮುಖ್ಯಮಂತ್ರಿ ಹಾಗೂ ಆರೋಗ್ಯ ಮಂತ್ರಿಗಳಿಗೆ ತಿಳಿಸಲಾಗುವುದು ಎಂದು ತಿಳಿಸಿದರು.

ಇದಕ್ಕೂ ಮೊದಲು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಸುರೇಶ ಇಟ್ನಾಳ, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಡಾ.ಬಿ.ಗೋಪಾಲಕೃಷ್ಣ, ಡಿಸಿಪಿ ಸಾಹಿಲ್ ಬಾಗ್ಲಾ, ಕಿಮ್ಸ್ ನಿರ್ದೇಶಕ ಡಾ.ರಾಮಲಿಂಗಪ್ಪ ಅಂಟರಥಾನಿ, ಉಪವಿಭಾಗಾಧಿಕಾರಿ ಅಶೋಕ ತೇಲಿ, ಹುಬ್ಬಳ್ಳಿ ಶಹರ ತಹಶೀಲ್ದಾರ ಶಶಿಧರ್ ಮಾಡ್ಯಾಳ, ಅಪರ ತಹಶೀಲ್ದಾರ ಸಂತೋಷ ಹಿರೇಮಠ, ಸೇರಿದಂತೆ ಇತರ ಅಧಿಕಾರಿಗಳಿಂದ ಸಚಿವರು ಮಾಹಿತಿ ಪಡೆದರು.

Share this article!

Leave a Reply

Your email address will not be published. Required fields are marked *

error: Content is protected !!