ಧಾರವಾಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಅರಣ್ಯ ಹಾಗೂ ಉನ್ನತ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಇಂದು ಬೆಳಿಗ್ಗೆ 9 ಗಂಟೆಗೆ ಉನ್ನತ ಶಿಕ್ಷಣ ಅಕಾಡೆಮಿ ಸಂಕೀರ್ಣದಲ್ಲಿ ಜಿಲ್ಲಾ ಮಟ್ಟದ ವನಮಹೋತ್ಸವ ಸಪ್ತಾಹ ಹಾಗೂ ಕೋಟಿ ವೃಕ್ಷ ಅಭಿಯಾನದ ಉದ್ಘಾಟನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಕೋಟಿ ವೃಕ್ಷ ಅಭಿಯಾನ ಕಾರ್ಯಕ್ರಮದಲ್ಲಿ ಕೇಂದ್ರ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಲ್ಹಾದ ಜೋಶಿ ಹಾಗೂ ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಗೌರವ ಉಪಸ್ಥಿತರಿರುವರು.
ಜುಲೈ 1 ರಿಂದ ಜುಲೈ 7 ರ ಅವಧಿಯಲ್ಲಿ ಅರಣ್ಯ ಪ್ರದೇಶಗಳಲ್ಲಿ ಖಾಲಿ ಇರುವ ಸ್ಥಳಗಳು, ಅರಣ್ಯೇತರ ಸರ್ಕಾರಿ ಸ್ಥಳಗಳು, ರಸ್ತೆ ಬದಿಗಳು, ಶೈಕ್ಷಣಿಕ ಸಂಸ್ಥೆಗಳ ಆವರಣ, ಆಸ್ಪತ್ರೆಗಳ ಆವರಣ, ಕೈಗಾರಿಕಾ ಪ್ರದೇಶಗಳ ಆವರಣಗಳಲ್ಲಿ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
ಧಾರ್ಮಿಕ ಸಂಘ ಸಂಸ್ಥೆಗಳ ಆವರಣ, ವಿಶ್ವ ವಿದ್ಯಾಲಯಗಳ ಆವರಣ, ಸರ್ಕಾರಿ ಇಲಾಖೆಗಳ ಆವರಣ, ರೈತರ ಜಮೀನುಗಳ ಬದುಗಳ ಮೇಲೆ ಮತ್ತು ಕೆರೆ ಅಂಗಳಗಳು ಇತ್ಯಾದಿ ಪ್ರದೇಶಗಳಲ್ಲಿ ಸ್ಥಳೀಯ ಜಾತಿಯ ಮರಗಿಡಗಳನ್ನು ವ್ಯಾಪಕವಾಗಿ ನೆಡುವುದರ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಯೋಜನೆ ರೂಪಿಸಲಾಗಿದೆ.
ಬೃಹತ್ ವನಮಹೋತ್ಸವ ಅಭಿಯಾನವನದಲ್ಲಿ ಎಲ್ಲಾ ಸರ್ಕಾರಿ ಇಲಾಖೆಗಳ ಅಧಿಕಾರಿ ಹಾಗೂ ಸಿಬ್ಬಂದಿಗಳು, ಶಾಲಾ ಕಾಲೇಜು ವಿದ್ಯಾರ್ಥಿ, ವಿದ್ಯಾರ್ಥಿನಿಯರು, ಪರಿಸರ ಸಂಘಟನೆಗಳು ಹಾಗೂ ಆಸಕ್ತ ಸರ್ಕಾರೇತರ ಸಂಘ ಸಂಸ್ಥೆಗಳನ್ನು ಸಕ್ರೀಯವಾಗಿ ತೊಡಗಿಸಿಕೊಳ್ಳಲು ಕೋರಲಾಗಿದೆ.
ಈ ವನಮಹೋತ್ಸವ ಸಪ್ತಾಹದಲ್ಲಿ ಧಾರವಾಡ ಜಿಲ್ಲೆ ಒಟ್ಟು 145 ಗ್ರಾಮ ಪಂಚಾಯತ ವ್ಯಾಪ್ತಿಯ ವಿವಿಧ ಸ್ಥಳಗಳಲ್ಲಿ ಪ್ರಾದೇಶಿಕ ಅರಣ್ಯ ವಿಭಾಗ ಹಾಗೂ ಸಾಮಾಜಿಕ ಅರಣ್ಯ ವಿಭಾಗದ ವತಿಯಿಂದ ಒಟ್ಟು 2.52 ಲಕ್ಷ ಸಸಿಗಳನ್ನು ನೆಡಲು ಕಾರ್ಯಕ್ರಮ ರೂಪಿಸಿಕೊಳ್ಳಲಾಗಿದೆ.
ಈ ಹಿನ್ನೆಲೆಯಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿ, ವಿದ್ಯಾರ್ಥಿನಿಯರು ಹಾಗೂ ಇತರ ಆಸಕ್ತ ಸರ್ಕಾರೇತರ ಸಂಸ್ಥೆಗಳು ಈ ಕಾರ್ಯಕ್ರಮಕ್ಕೆ ಎಲ್ಲ ಆಸಕ್ತರು ಕೈ ಜೋಡಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾರ್ಮಿಕ ಇಲಾಖೆಯ ಸಚಿವ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್.ಲಾಡ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಉನ್ನತ ಶಿಕ್ಷಣ ಸಚಿವ ಎಮ್.ಸಿ. ಸುಧಾಕರ ವಿಶೇಷ ಅತಿಥಿಗಳಾಗಿ ಭಾಗವಹಿಸುವರು. ಶಾಸಕ ಅರವಿಂದ ಬೆಲ್ಲದ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಶಾಸಕರಾದ ವಿನಯ ಕುಲಕರ್ಣಿ ಹಾಗೂ ಅಬ್ಬಯ್ಯ ಪ್ರಸಾದ ಸೇರಿದಂತೆ, ಧಾರವಾಡ ಜಿಲ್ಲೆಯ ಶಾಸಕರು, ಮಹಾಪೌರರು, ವಿವಿಧ ಜನಪ್ರತಿನಿಧಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು, ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸುವರು.